ಮಹಾರಾಷ್ಟ್ರ ಹಾಗೂ ಹರ್ಯಾಣ ಚುನಾವಣೆ ಫಲಿತಾಂಶಗಳು ಪ್ರಕಟವಾಗುತ್ತಿರುವ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ಗೆ ಮರ್ಮಾಘಾತವಾಗಿದೆ! ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆಪ್ತ, ಮಾಜಿ ಸಂಸದ ಸಿ.ಎಚ್.ವಿಜಯ್ ಶಂಕರ್ ಮತ್ತೆ ಬಿಜೆಪಿಯತ್ತ ಮುಖ ಮಾಡುವ ಸೂಚನೆ ನೀಡಿದ್ದಾರೆ.
ಆ ಮೂಲಕ ಕಾಂಗ್ರೆಸ್ಸಿಗರಿಗೆ ಶಾಕ್ ನೀಡಲು ಸಜ್ಜಾಗಿದ್ದಾರೆ. ಕಾಂಗ್ರೆಸ್ ತೊರೆದು ವಿಜಯ್ ಶಂಕರ್ ಬಿಜೆಪಿ ಸೇರುವ ನಿರ್ಧಾರ ಮಾಡಿದ್ದು, ಈ ಬಗ್ಗೆ ತಮ್ಮ ಆಪ್ತ ಕಾರ್ಯಕರ್ತರ ಬಳಿ ಹೇಳಿಕೊಂಡಿದ್ದಾರೆ. ಶೀಘ್ರವೇ ಬಿಜೆಪಿ ಸೇರಲು ನಿರ್ಧರಿಸಿದ್ದು, ಇದಕ್ಕೆ ಬಿ.ಎಸ್.ಯಡಿಯೂರಪ್ಪ ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.
ಮುಂದಿನ ಚುನಾವಣೆಯಲ್ಲಿ ಪಿರಿಯಾಪಟ್ಟಣದಿಂದ ಬಿಜೆಪಿ ಅಭ್ಯರ್ಥಿಯಾಗಿ ವಿಜಯ್ ಶಂಕರ್ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಅದಕ್ಕೆ ಬಿಜೆಪಿ ನಾಯಕರಿಂದಲೂ ಒಪ್ಪಿಗೆ ದೊರಕಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈಸೂರಿನಿಂದ ಕಣಕ್ಕಿಳಿದಿದ್ದ ವಿಜಯ್ ಶಂಕರ್, ಪ್ರತಾಪ್ ಸಿಂಹ ವಿರುದ್ಧ 1.38 ಲಕ್ಷ ಮತಗಳ ಅಂತರದಿಂದ ಪರಾಭವಗೊಂಡಿದ್ದರು.
2 ಬಾರಿ ಸಂಸದರಾಗಿದ್ದ ವಿಜಯ್ ಶಂಕರ್, 1994ರಲ್ಲಿ ಹುಣಸೂರಿನ ಶಾಸಕರಾಗಿ ವಿಧಾನಸಭೆಗೆ ಪ್ರವೇಶಿಸಿದ್ದರು. ಆ ಬಳಿಕ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. 1998 ಮತ್ತು 2004ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದ ಅವರು, 2014 ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ಗೆ ಸೇರಿದ್ದರು. ಬಳಿಕದ ದಿನಗಳಲ್ಲಿ ಸಿದ್ದರಾಮಯ್ಯ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದರು.
Comments
Post a Comment